ತಮಿಳುನಾಡು: ಇಲ್ಲಿನ ಮೈಲಾಡುತುರೈ ಹೊಸ ಬಸ್ ನಿಲ್ದಾಣದಲ್ಲಿ ಗುರುವಾರ(ಅ.10) ರಂದು, ಹುಟ್ಟಿದ ಕೆಲವೇ ಗಂಟೆಗಳಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ಸಾರ್ವಜನಿಕ ಶೌಚಾಲಯದಲ್ಲಿ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಶೌಚಾಲಯ ಸ್ವಚ್ಛಗೊಳಿಸಲು ಬಂದಿದ್ದ ಸಿಬಂದಿ ಕಣ್ಣಿಗೆ ಮಗು ಕಂಡಿದ್ದು, ಅವರು ಕೂಡಲೇ ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ನಂತರ ಮಗುವನ್ನು ತಪಾಸಣೆ ನಡೆಸಿದ ವೈದ್ಯರು ಮಗು ಕೆಲವೇ ಗಂಟೆಗಳ ಮೊದಲು ಜನಿಸಿದ್ದಾಗಿ ಹೇಳಿದ್ದಾರೆ. ಮಗುವಿನ ಅರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ವೈದ್ಯರ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ದಾಖಲಿಸಿಕೊಂಡಿರುವ ಇಲ್ಲಿನ ಪೊಲೀಸರು ಮಗುವಿನ ಪೋಷಕರ ಪತ್ತೆಗೆ ಬಲೆ ಬೀಸಿದ್ದಾರೆ. ಯಾವ ಉದ್ದೇಶಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.