ಹುಕ್ಕೇರಿ: ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜು ಯರಗಟ್ಟಿಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಸಾಂಸ್ಕೃತಿಕ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಕಿರಣ್ ಎಂ. ಚೌಗುಲ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀಮತಿ ಎ.ಆರ್. ಮಠಪತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಲ್ಲದೆ ಸಾಹಿತ್ಯಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಸರ್ವತೋಮುಖ ಬೆಳವಣಿಗೆ ಸಾಧಿಸಬೇಕು ಎಂದು ಸಲಹೆ ನೀಡಿದರು. ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಪೂರ್ಣ ವ್ಯಕ್ತಿತ್ವದ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು. ಕರ್ನಾಟಕ ಪಬ್ಲಿಕ್ ಶಾಲೆ ಯರಗಟ್ಟಿಯಲ್ಲಿರುವ ಮಕ್ಕಳಿಗೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಅವರ ವೈಯಕ್ತಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಧ್ಯಾಪಕರಾದ ಎಸ.ಎ. ಸರೀಕರ ಅವರು ಭಾಗವಹಿಸಿ, ವಿದ್ಯಾರ್ಥಿಗಳು ಉತ್ತಮ ನಡೆ-ನುಡಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಶಾಲೆ-ಕಾಲೇಜುಗಳಲ್ಲಿ ಪಡೆದುಕೊಂಡ ವಿದ್ಯೆಯು ಉತ್ತಮ ಅಂಕಗಳೊಂದಿಗೆ ಫಲಿತಾಂಶದಲ್ಲಿ ಪ್ರತಿಫಲಿಸುವಂತಾಗಬೇಕು. ಈ ಮೂಲಕ ಸಂಸ್ಥೆ ಹಾಗೂ ಪಾಲಕರಿಗೆ ಗೌರವ ತರಲು ಸಾಧ್ಯ ಎಂದು ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಸಹಾಯಕ ಬಸಗೌಡ ಮದ್ಯಾಳಿ, ಉಪನ್ಯಾಸಕರು ಲೋಕಪ್ಪ ಲಮಾಣಿ, ಸುಲೋಚನಾ ಬಾಗೇವಾಡಿ, ಸುಪ್ರಿಯಾ ನಾಯಿಕ್, ರಾಕೇಶ ಹಿರೇಮಠ ಹಾಗೂ ಕು. ಧನಶ್ರೀ ಸೇರಿದಂತೆ ಇತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143