ಬೆಳಗಾವಿ: ಜಿಲ್ಲೆಯಾದ್ಯಂತ ನಿನ್ನೆಯಿಂದ ಬಿರುಗಾಳಿ ಸಹಿತ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮಳೆಯ ತೀವ್ರತೆಗೆ ರೈಲು ನಿಲ್ದಾಣದ ರಸ್ತೆಯಲ್ಲಿ ಬೃಹತ್ ಮರ ಧರೆಗುರುಳಿದ್ದು, ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ. ಪರಿಣಾಮವಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಹಾನಗರ ಪಾಲಿಕೆ ಸಿಬ್ಬಂದಿಗಳು ಮಳೆಯ ನಡುವೆಯೇ ಮರ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಇನ್ನೊಂದೆಡೆ, ಜಿಲ್ಲೆಯಲ್ಲಿ ಸಪ್ತ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವೆಡೆ ಸೇತುವೆಗಳು ಹಾಗೂ ರಸ್ತೆಗಳು ಜಲಾವೃತಗೊಂಡಿರುವ ದೃಶ್ಯಗಳು ಕಂಡುಬಂದಿವೆ.
ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಮಳೆ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಕಂಡುಬಂದಿದೆ. ಜನತೆಗೆ ಅಗತ್ಯ ಮುಂಜಾಗ್ರತೆ ವಹಿಸಲು ಹಾಗೂ ಅನಾವಶ್ಯಕ ಪ್ರವಾಸದಿಂದ ದೂರವಿರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 95905 51177