ಬೆಳಗಾವಿ: ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿಯನ್ನು ಹೆಚ್ಚಿಸಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಸೂಚಿಸಿದ್ದಾರೆ. ಖಾಸಗಿ ಶಾಲೆಗಳ ಮಾದರಿಯಲ್ಲಿ ಸರ್ಕಾರಿ ಶಾಲೆಗಳನ್ನು ನಿರ್ವಹಿಸುವ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಅವರು ತಿಳಿಸಿದರು.
ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಮಂಗಳವಾರ (ಜುಲೈ 8) ನಡೆದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ವರ್ಷಕ್ಕಿಂತ ಹಾಜರಾತಿ ಕಡಿಮೆ ಇರುವ ಶಾಲೆಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಮಕ್ಕಳನ್ನು ಶಾಲೆಗೆ ಕರೆತಂದು ಅವರಿಗೆ ಗುಣಾತ್ಮಕ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು. ಈ ಕಾರ್ಯಕ್ಕಾಗಿ ಇಲಾಖೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿ “ಶಾಲೆಗೆ ಬಾ” ಎಂಬ ಅಭಿಯಾನವನ್ನು ಹಮ್ಮಿಕೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ, ಊಟ, ಪುಸ್ತಕ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ನೀಡಲಾಗುತ್ತಿದೆ. ಜುಲೈ 30 ರವರೆಗೆ ಶಾಲಾ ಪ್ರವೇಶಕ್ಕೆ ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸರ್ಕಾರಿ ಶಾಲೆಗೆ ಪ್ರವೇಶ ಪಡೆಯುವಂತೆ ಕ್ರಮ ವಹಿಸಬೇಕು ಎಂದು ಅವರು ಒತ್ತಿ ಹೇಳಿದರು.
ಜಿಲ್ಲೆಯಲ್ಲಿ ಗೋಕಾಕ ಮತ್ತು ರಾಯಬಾಗ ತಾಲೂಕುಗಳಲ್ಲಿ ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ ಬಹಳ ಕಡಿಮೆಯಿದೆ ಎಂದು ಸಚಿವರು ಗಮನ ಸೆಳೆದರು. ಪ್ರತಿ ವರ್ಷ ಮಕ್ಕಳ ದಾಖಲಾತಿಯ ಅಂಕಿಅಂಶಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ನಿರಂತರ ಪರಿಶೀಲನೆ ನಡೆಸಬೇಕು ಎಂದು ಅವರು ಸೂಚಿಸಿದರು.
ಕಳೆದ ವರ್ಷಕ್ಕಿಂತ ಹೆಚ್ಚು ಮಕ್ಕಳು ಈ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇದೇ ರೀತಿಯಲ್ಲಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕು ಎಂದು ಸಚಿವರು ಆಶಿಸಿದರು.
ಜಿಲ್ಲೆಯಲ್ಲಿ ಕಲಿಕೆಯಿಂದ ಹಿಂದುಳಿದ ಮಕ್ಕಳನ್ನು ಗುರುತಿಸಿ, ಅಂತಹ ಮಕ್ಕಳನ್ನು ಕಲಿಕೆಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಉತ್ತಮ ಶಿಕ್ಷಕರಿದ್ದು, ಅಂತಹ ಶಿಕ್ಷಕರನ್ನು ಗುರುತಿಸಿ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂದು ಸಚಿವರು ತಿಳಿಸಿದರು. ಪ್ರತಿ ಜಿಲ್ಲೆಯಲ್ಲಿ “ಓದು ಕರ್ನಾಟಕ” ಎಂಬ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರದಿಂದ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಅವರು ನೆನಪಿಸಿದರು.
ಪ್ರತಿ ಸರ್ಕಾರಿ ಶಾಲೆಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಗತ್ಯ. ಅದೇ ರೀತಿಯಲ್ಲಿ ಶಾಲೆಗಳಲ್ಲಿ ಶಿಕ್ಷಕರ ಹಾಜರಾತಿ ಕೂಡ ಕಡ್ಡಾಯವಾಗಿದೆ ಎಂದು ಸಚಿವರು ಸೂಚಿಸಿದರು.
ಇಲಾಖೆಯಿಂದ ಬಿಡುಗಡೆಯಾಗುವಂತಹ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳಿಗೆ ವಿತರಿಸಲಾಗುವ ಶೂ ಮತ್ತು ಸಾಕ್ಸ್ ಗುಣಮಟ್ಟದಿಂದ ಕೂಡಿರಬೇಕು. ಜುಲೈ ಅಂತ್ಯದೊಳಗಾಗಿ ಎಲ್ಲ ಮಕ್ಕಳಿಗೆ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳು ವಿತರಣೆಯಾಗಬೇಕು. ಶಿಕ್ಷಣ ಇಲಾಖೆಯಿಂದ ಜಾರಿಯಾಗುವಂತಹ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಸಚಿವ ಮಧು ಬಂಗಾರಪ್ಪ ಅವರು ಸೂಚನೆ ನೀಡಿದರು.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143